ಪೊಲಿಟಿಕಲ್

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ

ಚಿತ್ರದುರ್ಗ: ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ಸ್ಪಷ್ಟಪಡಿಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷ ಆಲೋಚಿಸಿಲ್ಲ. ಮಾಧ್ಯಮದಲ್ಲಿ ಮಾತ್ರ ಚರ್ಚೆ ನಡೆಯುತ್ತಿದೆ. ದೆಹಲಿಯ ನಾಯಕರೇ ಈ ಗೊಂದಲಗಳಿಗೆ ತೆರೆಯಳೆಯಲಿದ್ದಾರೆ’ ಎಂದು ಹೇಳಿದರು.

‘ಸರ್ಕಾರಕ್ಕೆ ಎರಡು ವರ್ಷ ತುಂಬುತ್ತಿರುವ ಕಾರಣಕ್ಕೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿತ್ತು. ಕೋವಿಡ್‌ ನಿರ್ವಹಣೆ ಹಾಗೂ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸುವ ಉದ್ದೇಶವಿತ್ತು. ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದ್ದರಿಂದ ಸಭೆ ರದ್ದುಪಡಿಸಲಾಗಿದೆ. ಔತಣಕೂಟ ಮಾತ್ರ ನಡೆಯಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

‘ಪಕ್ಷ ಹಾಗೂ ಮುಖ್ಯಮಂತ್ರಿಗೆ ಮುಜುಗರ ಉಂಟು ಮಾಡುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವವರನ್ನು ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿದೆ. ಬಸವನಗೌಡ ಪಾಟೀಲ ಯತ್ನಾಳ ಸೇರಿ ಅನೇಕರಿಗೆ ನೋಟಿಸ್ ನೀಡಲಾಗಿದೆ. ಸೂಕ್ತ ಸಂದರ್ಭದಲ್ಲಿ ಪಕ್ಷ ನಿರ್ಧಾರ ಕೈಗೊಳ್ಳಲಿದೆ’ ಎಂದರು.

ರಾಜ್ಯ ಪದಾಧಿಕಾರಿಗಳ ಸಭೆ 24ಕ್ಕೆ

 

ಮುಂಬರುವ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಜುಲೈ 24ರಂದು ಚಿತ್ರದುರ್ಗದಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಆಯೋಜಿಸಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್ ತಿಳಿಸಿದರು.

‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆ, ಹಾನಗಲ್‌ ಮತ್ತು ಸಿಂದಗಿ ಉಪಚುನಾವಣೆಯ ರೂಪುರೇಷಗಳ ಬಗ್ಗೆ ಚರ್ಚೆ ನಡೆಯಲಿದೆ. ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯ ಬಗ್ಗೆಯೂ ಕಾರ್ಯತಂತ್ರ ರೂಪಿಸಲಾಗುವುದು’ ಎಂದು ಹೇಳಿದರು.

 

Comment here