governanceವಿದ್ಯಾ ಸಂಸ್ಥೆ

ಆಧಾರ್ ಜೋಡಣೆಯ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ

Publicstory/prajayoga

ತಿಪಟೂರು: ಒಂದಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಗುರುತಿನ ಚೀಟಿ ಹೊಂದಿದ್ದರೆ ಆ ಸಮಸ್ಯೆಯನ್ನು ಬಗೆಹರಿಸಲು ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆಯೂ ಸಹಕಾರಿಯಾಗುತ್ತದೆ ಎಂದು ಉಪ ವಿಭಾಗಾಧಿಕಾರಿ ಕಲ್ಪಶ್ರೀ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಶುಕ್ರವಾರ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಆಯೋಜಿಸಿದ್ದ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮತ್ತು ತರಬೇತಿ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆಯನ್ನು ತಮ್ಮ ಗ್ರಾಮಗಳಲ್ಲಿ ಜನರಿಗೆ ತಿಳಿಸಿ ನಿಮ್ಮ ಗೆಳೆಯರು, ಸಂಬಂಧಿಕರಿಗೆ ಜಾಗೃತಿ ಮೂಡಿಸಿ ಎಂದರು.

ವಿದ್ಯಾರ್ಥಿಗಳೆಲ್ಲರೂ ತಮ್ಮ ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿ, 75ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಸಂಭ್ರಮಿಸಬೇಕು ಎಂದು ಹೇಳಿದರು.

ತಾಲೂಕು ದಂಡಾಧಿಕಾರಿ ಚಂದ್ರಶೇಖರ್.ಜೆ.ಆರ್. ಮಾತನಾಡಿ, ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಗೆ ವೋಟರ್ ಹೆಲ್ಪ್ ಲೈನ್ ಆಪ್ ಮುಖಾಂತರ ಜೋಡಣೆ ಮಾಡಬಹುದು ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸರಸ್ವತಿ.ಕೆ.ವಿ. ಮಾತನಾಡಿ, ವಿದ್ಯಾರ್ಥಿಗಳು ಮತದಾರರ ಚೀಟಿಗೆ ಆಧಾರ್ ಸಂಖ್ಯೆಯ ಜೋಡಣೆಯಲ್ಲಿ ಸೈನಿಕರಂತೆ ಕಾರ್ಯನಿರ್ವಹಿಸಬೇಕು ಹಾಗೂ ಸ್ವಾತಂತ್ರ‍್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ.ಹೊನ್ನಾಂಜಿನೇಯ ಡಿ.ಆರ್, ಸಮಾಜ ಕಲ್ಯಾಣ ಇಲಾಖೆಯ ಸಹ ನಿರ್ದೇಶಕ ದಿನೇಶ್, ಪತ್ರಿಕೋದ್ಯಮ ವಿಭಾಗದ ಶಂಕರಪ್ಪ(ಶಿರಾ), ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಂದೀಶ್ ಕೆ.ಆರ್ ಮತ್ತಿತರರು ಉಪಸ್ಥಿತರಿದ್ದರು

Comment here