ತುಮಕೂರು: ಮಳೆಯ ನೀರು ಹರಿದು ಹೋಗುವುದನ್ನು ತಡೆದು ಭೂಮಿಯಲ್ಲಿ ಇಂಗಿಸಿ ಸಮತೋಲನ ಕಾಯ್ದುಕೊಳ್ಳುವ ಕೆಲಸ ಆಗಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಆವರಣದ ಕುಂಚಿಟಿಗರ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಅಂತರ್ಜಲ ಚೇತನ ಕಾರ್ಯಕ್ರಮವನ್ನು ಉದ್ಥಾಟಿಸಿ ಅವರು ಮಾತನಾಡಿದರು.
ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಿಸುವ ಮೂಲಕ 30 ವರ್ಷಗಳ ಹಿಂದಿನ ಪರಿಸರ ಮತ್ತು ಪ್ರಕೃತಿಯನ್ನು ಉಳಿಸಿ, ಬೆಳೆಸುವ ಕಾರ್ಯವನ್ನು ನರೇಗಾ ಯೋಜನೆಯಡಿಯಲ್ಲಿ ಮಾಡಬೇಕಾಗಿದೆ ಎಂದರು.
ನರೇಗಾ ಯೋಜನೆಯಡಿ 249 ರೂ.ಇದ್ದ ಕೂಲಿ ಹಣವನ್ನು 275 ರೂ.ಗಳಿಗೆ ಹೆಚ್ಚಿಸಿ ದುಡಿಯುವ 9.31ಲಕ್ಷ ಕೈಗಳಿಗೆ ಕೆಲಸ ಕೊಡುವುದರ ಜೊತೆಗೆ ಸಾಮಾಜಿಕ ಆಸ್ತಿಗಳ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಹೊಲ, ಮನೆ ಕಾಮಗಾರಿಗಳನ್ನು ಕೈಗೊಂಡು ದುಡಿಯುವವರ ಕೂಲಿಯ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ. ಜಾಬ್ ಕಾರ್ಡ್ ಸ್ಥಳದಲ್ಲೇ ನೀಡಿ ಉದ್ಯೋಗ ಕಲ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮಾತನಾಡಿ, ಕುಡಿಯುವ ಸಿಹಿ ನೀರು ಮಳೆಯಿಂದ ಮಾತ್ರ ಲಭ್ಯವಾಗುತ್ತಿದ್ದು, ನೀರಿನ ಮೂಲಗಳಾದ ಕೆರೆ, ಹಳ್ಳ, ಬಾವಿಗಳಲ್ಲಿ ನೀರು ಸಂಗ್ರಹಿಸಿಡುವ ಕೆಲಸವಾಗಬೇಕು. ನೀರಿನ ಮಿತ ಬಳಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ ಅಂತರ್ಜಲ ಹೆಚ್ಚಿಸುವ ಕಾರ್ಯ ಈ ಯೋಜನೆಯಿಂದ ಆಗಬೇಕಾಗಿದೆ ಎಂದರು.
ಕೇಂದ್ರ ಸರ್ಕಾರ ವಿವಿಧ ಯೋಜನೆಗಳಡಿಯಲ್ಲಿ ಅಂತರ್ಜಲ ಹೆಚ್ಚಿಸಲು ಗ್ರಾಮೀಣಾಭಿವೃದ್ಧಿ ನರೇಗಾ ಯೋಜನೆಯಡಿಯಲ್ಲಿ ಅನುದಾನ ನೀಡಿದೆ. ಅಂತರ್ಜಲ ಮರುಪೂರಣಕ್ಕಾಗಿ ಕ್ರಿಯಾ ಯೋಜನೆ ತಯಾರಿಸಿ ಹರಿಯುವ ನೀರು ಕೆರೆ, ಕಾಲುವೆ, ಹಳ್ಳಗಳಲ್ಲಿ ನಿಲ್ಲುವಂತೆ ಮಾಡಬೇಕಾಗಿದೆ ಎಂದು ತಿಳಿಸಿದರು.
ಸಂಸದ ಜಿ.ಎಸ್.ಬಸವರಾಜು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್, ಶಾಸಕರುಗಳಾದ ಜಿ.ಬಿ.ಜ್ಯೋತಿಗಣೇಶ್, ಜಯರಾಂ, ಬಿ.ಸತ್ಯನಾರಾಯಣ, ಬಿ.ಸಿ.ನಾಗೇಶ್, ಡಾ ಹೆಚ್.ಡಿ. ರಂಗನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಮೊದಲಾದವರು ಉಪಸ್ಥಿತರಿದ್ದರು.