ತುಮಕೂರು
ಶಾಲಾ, ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಜೂ. 10 ರಿಂದ 12ರ ಅವಧಿಯಲ್ಲಿ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ ಎಂದು ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಗೃಹ ಸಚಿವಾಲಯ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 30 ರಂದು 5ನೇ ಹಂತದ ಮಾರ್ಗಸೂಚಿಯನ್ನು ಹೊರಡಿಸಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಶಾಲಾಕಾಲೇಜುಗಳು ಪುನರಾರಂಭ ಮಾಡಲಿವೆ.
ಪಾಲಕರು ಮತ್ತು ಇತರೆ ಪಾಲುದಾರರೊಂದಿಗೆ ಆಯಾ ಸಂಸ್ಥೆಯ ಮಟ್ಟದಲ್ಲಿ ಸಮಾಲೋಚನೆ ನಡೆಸಿ, ಅದರ ಆಧಾರದ ಮೇಲೆ ಜುಲೈ ತಿಂಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಜೂನ್ 1 ರಂದು ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ಸಮಗ್ರ ಶಿಕ್ಷಣದ ರಾಜ್ಯ ಯೋಜನಾ ನಿರ್ದೇಶಕರು ಹಾಗೂ ಇತರೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಪೋಷಕರು ಮತ್ತು ಸಂಬಂಧಿಸಿದ ಪಾಲುದಾರರ ಸಭೆಗಳನ್ನು ಪ್ರತಿ ಶಾಲೆಯ ಮಟ್ಟದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಮತ್ತು ಅನುದಾನ ರಹಿತ (ಖಾಸಗಿ) ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಕೂಡಲೇ ಜೂನ್ 10 ರಿಂದ ಜೂನ್ 12 ರ ನಡುವಿನ ಅವಧಿಯಲ್ಲಿ ಪೋಷಕರ ಮತ್ತು ಎಸ್ಡಿಎಂಸಿ ಸದಸ್ಯರ ಸಭೆ ಕರೆದು ಕೇಳಕಂಡ ಅಂಶಗಳ ಕುರಿತು ಅಭಿಪ್ರಾಯ ಸಂಗ್ರಹಿಸಲು ಸೂಚಿಸಲಾಗಿದೆ.
1. ಶಾಲೆಗಳನ್ನು ಪುನರಾರಂಭ ಮಾಡಬಹುದಾದ ದಿನಾಂಕ ಕುರಿತು.
2. ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಧಾನದ ಬಗ್ಗೆ.
3. ಶಾಲೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ.
ಪೋಷಕರು ಮತ್ತು ಎಸ್ಡಿಎಂಸಿ ಸದಸ್ಯರು ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಬೇಕೆಂದು ಸುರೇಶ್ ಕುಮಾರ್ ಅವರು ಮನವಿ ಮಾಡಿದ್ದಾರೆ.