ಶೀಘ್ರವೇ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಉಪಚುನಾವಣೆಯಲ್ಲಿ ಗೆದ್ದಿರುವ ಶಾಸಕರಿಗೂ ಸಚಿವ ಸ್ಥಾನ ದೊರೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗಾ ಮಠಕ್ಕೆ ಸೋಮವಾರ ಭೇಟಿ ನೀಡಿದ ಸಿ.ಟಿ.ರವಿ. ಡಾ.ಶಿವಕುಮಾರಸ್ವಾಮಿಗಳ ಗದ್ದುಗೆಯ ಬಳಿ ನಮಿಸಿ ಧ್ಯಾನಮಂದಿರಲ್ಲಿ ಧ್ಯಾನ ಮಾಡಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಉಪಮುಖ್ಯಮಂತ್ರಿಗಳ ಹುದ್ದೆಯನ್ನು ಸೃಷ್ಟಿಸುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟವಿಚಾರ. ಪಕ್ಷದ ಹೈಕಮಾಂಡ್ ವರಿಷ್ಠರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಉಪಚುನಾವಣೆಗೂ ಮೊದಲು ಕೆಲವರಿಗೆ ಕೊಟ್ಟ ಮಾತಿನಂತ ಮುಖ್ಯಮಂತ್ರಿ ಯಡಿಯೂರಪ್ಪ ನಡೆದುಕೊಳ್ಳಲಿದ್ದಾರೆ. ಹೀಗಾಗಿ ಹೊಸಬರಿಗೂ ಅವಕಾಶ ದೊರೆಯಲಿದೆ. ಪಕ್ಷ ಸಚಿವ ಸ್ಥಾನ ತೊರೆಯುವಂತೆ ಸೂಚಿಸಿದರೆ ಅದಕ್ಕೆ ಬದ್ದನಾಗಿರುತ್ತೇನೆ ಎಂದರು.