ತುಮಕೂರು: ರಾಷ್ಟ್ರೀಯ ಸಮಾನ ಕನಿಷ್ಟ ವೇತನ 21 ಸಾವಿರ ರೂಪಾಯಿ ನೀಡಬೇಕು. ಎಲ್ಲರಿಗೂ ಸರ್ಕಾರದಿಂದಲೇ 10 ಸಾವಿರ ಕನಿಷ್ಟ ಖಾತ್ರಿ ಪಿಂಚಣಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ತುಮಕೂರಿನ ಭಾರತ್ ಸಂಚಾರ್ ನಿಗಮ ಕಚೇರಿ ಎದುರು ಕಾರ್ಮಿಕ ಸಂಘಟನೆಗಳ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಅವುಗಳ ನಿವಾರಣೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ಡಿಸೆಲ್, ಪೆಟ್ರೋಲ್ ಮತ್ತು ದಿನಸಿ ಪದಾರ್ಥಗಳ ಬೆಲೆ ಗಗನಕ್ಕೆ ಏರಿದೆ. ಬೆಲೆ ನಿಯಂತ್ರಿಸಲು ಕೇಂದ್ರ ಮುಂದಾಗಿಲ್ಲ ಎಂದು ದೂರಿದರು.
ದೇಶದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿದೆ. ಉದ್ದಿಮಗಳು ಮುಚ್ಚುತ್ತಿವೆ. ಕಾರ್ಮಿಕರು ಬೀದಿಗೆ ಬೀಳುತ್ತಿದ್ದಾರೆ. ತಯಾರಿಕೆ ಮತ್ತು ಉತ್ಪಾದನೆ ಕುಂಠಿತವಾಗಿದೆ. ನಿರುದ್ಯೋಗ ಹೆಚ್ಚಿದೆ. ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ. ಇಂತಹ ಹೊತ್ತಿನಲ್ಲಿ ಕಾರ್ಮಿಕ ಕಾಯ್ದೆಗಳನ್ನು ನಾಲ್ಕು ಸಂಹಿತೆಗಳನ್ನಾಗಿ ಮಾಡಲು ಕೇಂದ್ರ ಉದ್ದೇಶಿಸಿದೆ. ಇದರಿಂದ ಕಾರ್ಖಾನೆಗಳ ಮಾಲಿಕರಿಗೆ ಹೆಚ್ಚು ಅನುಕೂಲ ಮಾಡಿಕೊಡುವುದು ಸರ್ಕಾರದ ಉದ್ದೇಶ ಎಂದು ಟೀಕಿಸಿದರು.
ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಮಾತನಾಡಿ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಶಾಸನಬದ್ಧ ಭವಿಷ್ಯನಿಧಿ ಜಾರಿಗೊಳಿಸಬೇಕು. ಸಾರ್ವತ್ರಿಕ ಪಡಿತರ ವ್ಯವಸ್ಥೆ ಕಲ್ಪಿಸಬೇಕು. ರೈತರ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಂಬಲ ಬೆಲೆ ಖಾತ್ರಿಪಡಿಸಬೇಕು. ರೈತರು ಮತ್ತು ಕೃಷಿಕೂಲಿಕಾರರ ಎಲ್ಲಾ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು, ಗುತ್ತಿಗೆ ಪದ್ದತಿ ರದ್ದುಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ. ಅಂಜಿನಪ್ಪ ಮಾತನಾಡಿ, ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರೈತರ ಆತ್ಮಹತ್ಯೆಗಳು ಮುಂದುವರಿದಿವೆ. ಡಾ. ಸ್ವಾಮಿನಾಥನ್ ವರದಿ ಜಾರಿ ಮಾಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಇದುವರೆಗೂ ಭರವಸೆಯನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು.
ಪರಿಸರವಾದಿ ಸಿ.ಯತಿರಾಜು ಮಾತನಾಡಿ, ದೇಶದಲ್ಲಿ ಕೃಷಿ ಬಿಕ್ಕಟ್ಟು ತಲೆದೋರಿದೆ. ಯಾವುದೇ ಸೌಲಭ್ಯಗಳಿಲ್ಲದೆ ರೈತರು ಪರದಾಡುತ್ತಿದ್ದಾರೆ. ರೈತ ಪರವಾದ ನೀತಿಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುತ್ತಿಲ್ಲ. ರೈತರು ಹಾಕಿದ ಬಂಡವಾಳ ಕೈಗೆ ಬರುತ್ತಿಲ್ಲ. ಹೀಗಾಗಿ ಸರ್ಕಾರಗಳು ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಎ.ನರಸಿಂಹಮೂರ್ತಿ, ಸಿಪಿಐ ಮುಖಂಡ ಕಂಬೇಗೌಡ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಎಐಯುಟಿಯುಸಿ ಮಂಜುಳ, ಎಸ್.ಎಫ್.ಐ ಜಿಲ್ಲಾಧ್ಯಕ್ಷ ಈ.ಶಿವಣ್ಣ, ಅಶ್ವಿನಿ ಮೊದಲಾದವರು ಮಾತನಾಡಿದರು.