ತುಮಕೂರು: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಶಾಸಕರೊಬ್ಬರಿಗೆ ಕೊರೋನಾ ವೈರಸ್ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಜು.5 ರಂದು ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದರು, ಜು.6 ರಂದು ಸೋಂಕು ಪಾಸಿಟಿವ್ ಕಂಡು ಬಂದಿದೆ.
ಸೋಂಕು ದೃಢಪಟ್ಟ ಬೆನ್ನಲ್ಲೇ ಶಾಸಕ ಡಾ.ರಂಗನಾಥ್ ಅವರು ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸಂಬಂಧಿಯೂ ಕೂಡ ಆಗಿದ್ದಾರೆ.
ತಮಗೆ ಕೊವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ, ಆಸ್ಪ್ರೆಯಲ್ಲಿ ದಾಖಲಾಗಿರುವ ಬಗ್ಗೆ ಸ್ವತಃ ಶಾಸಕರೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಯಾರೂ ಭಯ ಪಡುವ ಅಗತ್ಯ ಇಲ್ಲ. ಎಲ್ಲರೂ ರೋಗ ಹರಡದಂತೆ ಮುಂಜಾಗ್ರತೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಇದು ವ್ಯಾಪಕವಾಗಿ ವೈರಲ್ ಆಗಿದೆ.
ಕಳೆದ ಮೂರು ದಿನಗಳ ಹಿಂದಷ್ಟೇ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿಗೆ ಕೊರೊನಾ ಪಾಸಿಟಿವ್ ಇರುವುದಾಗಿ ತಿಳಿದು ಬಂದಿತ್ತು. ರಾಜ್ಯದಲ್ಲಿ ಈಗ ಎರಡನೇಯದಾಗಿ ಕುಣಿಗಲ್ ಶಾಸಕ ಕೊರೋನಾ ಸೋಂಕಿಗೆ ಒಳಗಾಗಿರುವುದು ಕಂಡು ಬಂದಿದೆ.