ತುಮಕೂರು: ತುರುವೇಕೆರೆ ತಾಲೂಕಿನಲ್ಲೂ ಚಿರತೆಗಳ ಹಾವಳಿ ಹೆಚ್ಚಾಗಿದೆ. ಇವುಗಳ ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಮಸಾಲ ಜಯರಾಮ್ ಒತ್ತಾಯಿಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಇದುವರೆಗೆ ಮೂವರನ್ನು ನರಭಕ್ಷಕ ಚಿರತೆಗಳು ಬಲಿತೆಗೆದುಕೊಂಡಿವೆ. ಈ ಹಿನ್ನೆಲೆಯಲ್ಲಿ ಚಿರತೆಗಳು ಮನುಷ್ಯರು ಮತ್ತು ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸದಂತೆ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಚಿರತೆಗಳು ತುರುವೇಕೆರೆ ತಾಲೂಕೊಂದರಲ್ಲೇ 50-60 ಇವೆ. ಈಗಾಗಲೇ ದನ, ಕುರಿ, ಮೇಕೆ, ನಾಯಿಗಳನ್ನು ತಿಂದುಹಾಕಿವೆ. ಚಿರತೆಗಳ ದಾಳಿ ನಿರಂತವಾಗಿ ನಡೆಯುತ್ತಲೇ ಇದೆ. ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿದೆ ಎಂದು ದೂರಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಚಿರತೆಗಳ ದಾಳಿ ಸಂಬಂಧ ಜಿಲ್ಲಾಡಳಿತ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಚಿರತೆಗೆ ಬಲಿಯಾಗಲು ಜಿಲ್ಲಾಡಳಿತದ ವೈಫಲ್ಯವೇ ಕಾರಣ. ಚಿರತೆಗಳ ದಾಳಿ ನಿಯಂತ್ರಣಕ್ಕೆ ಕ್ರಮ ಜರುಗಿಸದಿದ್ದರೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.