Publicstory. in
ತುಮಕೂರು: ಫೆಬ್ರವರಿ 8ರಂದು ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
[ಫೆಬ್ರವರಿ 11 ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆಗಾಗಿ ದೆಹಲಿಯಾದ್ಯಂತ 13 ಸಾವಿರ ಮತಕೇಂದ್ರಗಳನ್ನು ತೆರೆಯಲಾಗುವುದು ಎಂದು ಆಯೋಗ ಸ್ಪಷ್ಟಪಡಿಸಿದೆ.
ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 1,46,92,132 ಮಂದಿ ಮತದಾರರು ಮತ ಚಲಾಯಿಸಲಿದ್ದಾರೆ.
ಜನವರಿ 21ರಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ಆಯೋಗ ತಿಳಿಸಿದೆ.
ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ದೆಹಲಿಯ ಅಮ್ ಆದ್ಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಜ್ರಿವಾಲ್ ಅವರನ್ನು ಸೋಲಿಸಬೇಕು ಎಂದು ಕರೆ ನೀಡಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳುತ್ತಿದ್ದಾರೆ. ಕೇವಲ ವದಂತಿಗಳನ್ನು ಸೃಷ್ಟಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಅಭಿವೃದ್ಧಿ ಕೆಲಸ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ದೂರಿದ್ದಾರೆ.
ಆಮ್ ಆದ್ಮಿ ಪಕ್ಷದ ಸರ್ಕಾರ ದೆಹಲಿಯಲ್ಲಿ ಉತ್ತಮ ಆರೋಗ್ಯ,ವ್ಯವಸ್ಥೆ ಕಲ್ಪಿಸಿದೆ. ಶಿಕ್ಷಣ ಬಡವರಿಗೂ ಸಿಗುವಂತೆ ಮಾಡಿದೆ. ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಿದೆ. ಜನರ ಸಮಸ್ಯೆಗಳಿಗೆ ದೆಹಲಿ ಸರ್ಕಾರ ಸ್ಪಂದಿಸಿದೆ ಎಂದು ಸರ್ಕಾರದ ಸಾಧನೆಗಳನ್ನು ಪಟ್ಟಿಮಾಡಿದರು.
ಜೆಎನ್ ಯು ವಿದ್ಯಾರ್ಥಿಗಳ ಮೇಲೆ ದಾಳಿ – ವ್ಯಾಪಕ ಖಂಡನೆ
ದೆಹಲಿಯ ಜವಹರಲಾಲ್ ವಿಶ್ವವಿದ್ಯಾಲಯದ ಕ್ಯಾಂಪಸ್ ಗೆ ನುಗ್ಗಿದ ಮುಸುಕುಧಾರಿಗಳ ಗುಂಪು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಕ್ಕೆ ಮುಸುಕುಧಾರಿಗಳು ನುಗ್ಗಲು ಹೇಗೆ ಸಾಧ್ಯವಾಯಿತು. ಮುಸುಕುಧಾರಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಪಿಠೋಪರಣಗಳನ್ನು ಧ್ವಂಸಗೊಳಿಸುತ್ತಿದ್ದರೂ ಪೊಲೀಸರು ಮೌನ ವಹಿಸಿದ್ದು ಏಕೆ ಎಂದು ಹಲವು ಮುಖಂಡರು ಪ್ರಶ್ನಿಸಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಘಟನೆಯನ್ನು ಖಂಡಿಸಿದ್ದು ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಇದೇ ವೇಳೆ ಜೆಎನ್ ಯು ಟೀಚರ್ಸ್ ಅಸೋಸಿಯೇಷನ್ ಶಾಂತಿಯುತ ಪ್ರತಿಭಟನೆ ನಡೆಸಿದ್ದು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಗೂಂಡಾಗಳು ದಾಳಿ ನಡೆಸಿದ್ದು, ಇದರಲ್ಲಿ ಎಬಿವಿಪಿ ಭಾಗಿಯಾಗಿದೆ. ಈ ಹಿನ್ನೆಲೆಯಲ್ಲಿ ಕುಲಪತಿ ಜಗದೀಶ್ ಕುಮಾರ್ ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.