ತುಮಕೂರು: ಬೇಸಿಗೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ರಾಕೇಶ್‍ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಎಲ್ಲಾ ಹೋಬಳಿಗಳ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ತಾಲೂಕು ತಹಶೀಲ್ದಾರರೊಂದಿಗೆ ವಿಡೀಯೋ ಸಂವಾದ ನಡೆಸಿ ಸೂಚನೆ ನೀಡಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಹಾಲಿ ಇರುವ ಬಹುತೇಕ ಜಲಮೂಲಗಳು ಬತ್ತಿಹೋಗಿವೆ. ಹೀಗಾಗಿ ಜನರಿಗೆ ಕುಡಿಯವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಯಿದೆ. ಬೇಸಿಗೆ ಸಮೀಪಿಸಿರುವುದರಿಂದ ಸಮಸ್ಯೆ ಇರುವ ಕಡೆ ತುರ್ತಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಸಮಸ್ಯೆಯಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಳೆದ 2019ರ ಅಕ್ಟೋಬರ್ ನಲ್ಲಿ ಜಿಲ್ಲೆಯ ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ತುಮಕೂರು ಹಾಗೂ ತುರುವೇಕೆರೆ ಸೇರಿದಂತೆ 7 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿತ್ತು. ಸದರಿ ತಾಲ್ಲೂಕುಗಳಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಟ್ಯಾಂಕರ್ ಮೂಲಕ ನೀರನ್ನು ಒದಗಿಸಲು ಎಸ್.ಡಿ.ಆರ್.ಎಫ್/ಎನ್.ಡಿ.ಆರ್.ಎಫ್ ಮಾರ್ಗಸೂಚಿಯ ಪ್ರಕಾರ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬರಪೀಡಿತ ತಾಲ್ಲೂಕುಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಟಾಸ್ಕ್‍ಪೋರ್ಸ್ ಸಮಿತಿ ಸಭೆ ನಡೆಸಬೇಕು. ನಂತರ ಸಭೆಯ ನಡಾವಳಿಯನ್ನು ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಿ ಅನುಮೋದನೆ ಪಡೆದು ಸಿ.ಆರ್.ಎಫ್. ನಿಧಿಯಲ್ಲಿರುವ ಅನುದಾನವನ್ನು ಭರಿಸಿ ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಬೇಕು.
ಉಳಿದ ಶಿರಾ, ಚಿ.ನಾ.ಹಳ್ಳಿ ಹಾಗೂ ತಿಪಟೂರು ಸೇರಿದಂತೆ 3 ತಾಲ್ಲೂಕುಗಳಲ್ಲಿ ಗ್ರಾಮ ಪಂಚಾಯಿತಿಗಳ 14ನೇ ಹಣಕಾಸು ಯೋಜನೆಯಡಿ ಭರಿಸಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಕ್ರಮವಹಿಸಬೇಕೆಂದು ತಿಳಿಸಿದರು.
ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹೋಬಳಿಗೆ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿದ್ದು, ನಿಯೋಜಿತ ಅಧಿಕಾರಿಗಳು ನಿಗಧಿಪಡಿಸಿರುವ ಹೋಬಳಿಗಳಿಗೆ ಭೇಟಿ ನೀಡಿ ಟ್ಯಾಂಕರ್ ಮೂಲಕ ನೀರನ್ನು ಒದಗಿಸುತ್ತಿರುವುದನ್ನು ದೃಢಪಡಿಸಿಕೊಳ್ಳಬೇಕು.
ನೋಡಲ್ ಅಧಿಕಾರಿಗಳು ತಮ್ಮ ದೂರವಾಣಿ ಸಂಖ್ಯೆಯನ್ನು ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ನೀಡಬೇಕು. ಕೈಗೊಂಡ ಕ್ರಮದ ಬಗ್ಗೆ ಪ್ರತಿ ಶುಕ್ರವಾರ ಜಿಲ್ಲಾ ಪಂಚಾಯಿತಿಗೆ ವರದಿಯನ್ನು ನೀಡಲು ಕ್ರಮವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಜಂಟಿಯಾಗಿ ಸಭೆಯನ್ನು ಏರ್ಪಡಿಸಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಆಭಾವ ಉಂಟಾಗುವ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಬೇಕು ಎಂದರು.
ಪ್ರತಿದಿನ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಒದಗಿಸುತ್ತಿರುವ ಮಾಹಿತಿಯನ್ನು ಛಾಯಾಚಿತ್ರದೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಮತ್ತು ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳ ವಾಟ್ಸಾಪ್ ಗ್ರೂಪ್‍ಗಳಲ್ಲಿ ಇಂಧೀಕರಿಸಬೇಕು. ಜಿಲ್ಲೆಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಸೂಕ್ತ ಕ್ರಮವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಅವರು ಸೂಚಿಸಿದರು.