Publicstory
ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರತಿಭಾವಂತ ಮಾಧ್ಯಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು(6 ರಿಂದ 10ನೇ ತರಗತಿ)ಗಳಿಗೆ ವಾರ್ಷಿಕ 10 ಸಾವಿರ ರೂ.ಗಳ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತ ವಿದ್ಯಾರ್ಥಿಗಳು ಜಾಲತಾಣ http:/service online.gov.in/Karnataka ಮೂಲಕ ಮೇ 25ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತ ಕ್ರೀಡಾ ಸಂಸ್ಥೆಗಳು ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಕ್ರೀಡಾಪಟುಗಳು 2020ರ ಏಪ್ರಿಲ್ 1 ರಿಂದ 2021 ರ ಮಾರ್ಚ್ 31ರವರೆಗೆ ನಡೆದ ಕ್ರೀಡಾ ಕೂಟಗಳಲ್ಲಿ ಭಾಗವಹಿಸಿದ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.
ಅಲ್ಲದೆ ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ ಕ್ರೀಡಾಪಟು, ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಸ್ಕೂಲ್ ಗೇಮ್ ಫೆಡರೇಷನ್ ಆಫ್ ಇಂಡಿಯಾ ಯೋಜನೆಯಡಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದವರು, ರಾಷ್ಟ್ರೀಯ ಶಾಲಾ ಕ್ರೀಡಾಕೂಟಗಳಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.