Publicstory/prajayoga
ತುಮಕೂರು : ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗುನ್ಯ ರೋಗಗಳು ಹರಡದಂತೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿಂದು ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದ್ದು ಎಲ್ಲಿಯೂ ನೀರು ನಿಲ್ಲದಂತೆ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ ನೀರು ಸರಾಗವಾಗಿ ಹರಿಯುವಂತೆ ಅಧಿಕಾರಿಗಳು ಗಮನಹರಿಸಬೇಕೆಂದು ತಿಳಿಸಿದರಲ್ಲದೇ ನೀರು ಸರಬರಾಜು ಮಾಡುವ ಪೈಪುಗಳನ್ನು ಆಗಿಂದ್ದಾಗ್ಗೆ ಪರೀಕ್ಷಿಸುವುದು ಮತ್ತು ನೀರಿನ ಸೋರಿಕೆಯಾಗದಂತೆ ಎಚ್ಚರಿಕೆವಹಿಸಬೇಕೆಂದು ತಿಳಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ವಾರಕೊಮ್ಮೆ ಸೊಳ್ಳೆ ನಾಶಕ ದ್ರಾವಣಗಳನ್ನು ಸೊಳ್ಳೆ ಉತ್ಪತ್ತಿಯಾಗುವ ತಾಣಗಳಲ್ಲಿ ಸಿಂಪಡಿಸಿಕೊಳ್ಳಲು ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು. ರಸ್ತೆ ಬದಿಯ ತೆರೆದ ವಾತಾವರಣದಲ್ಲಿ ಕತ್ತರಿಸಿದ ಹಣ್ಣುಗಳ ಮಾರಾಟ ನಿಷೇಧಿಸುವುದು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಹೋಟೆಲ್‌ಗಳಲ್ಲಿ ಸ್ವಚ್ಛತೆ, ನೈರ್ಮಲ್ಯತೆಯನ್ನು ಕಾಪಾಡುವುದು, ಧೂಮೀಕರಣ ಕೈಗೊಳ್ಳುವುದು, ಉದ್ಯಾನವನಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವುದರೊಂದಿಗೆ ನೀರು ನಿಲ್ಲದಂತೆ ಸೂಕ್ತ ಕ್ರಮವಹಿಸಬೇಕೆಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡಬೇಕು. ನಗರದಲ್ಲಿರುವ ಉದ್ಯಾನವನಗಳಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿಯನ್ನು ಫಲಕಗಳನ್ನು ಅಳವಡಿಸಬೇಕು. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಕೃಷಿ ಉತ್ಪನ್ನ ಮಾರುಕಟ್ಟೆ, ಚಿತ್ರಮಂದಿರ, ತರಕಾರಿ ಮಾರುಕಟ್ಟೆ, ಸಾರ್ವಜನಿಕ ಪ್ರದೇಶಗಳಲ್ಲಿ ಸಮರ್ಪಕವಾಗಿ ಘನತ್ಯಾಜ್ಯ ವಸ್ತುಗಳ ವಿಲೇವಾರಿಗೆ ಸೂಕ್ತ ಕ್ರಮಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳ ಬಳಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಶೌಚಾಲಯ ವ್ಯವಸ್ಥೆ ಸರಿಯಿಲ್ಲದಿದ್ದಲ್ಲಿ ಶಾಲಾಭಿವೃದ್ಧಿ ಸಮಿತಿ ಸ್ಥಳೀಯ ಗ್ರಾಮ ಪಂಚಾಯಿತಿಯ ಅಧಿಕಾರಿಗಳ ಗಮನಕ್ಕೆ ತಂದು ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಎಲ್ಲಾ ಶಾಲೆಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಡಿಡಿಪಿಐ ಸಿ ನಂಜಯ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಆಶಾ ಕಾರ್ಯಕರ್ತೆಯರು ಮನೆ- ಮನೆಗೆ ಭೇಟಿ ನೀಡಿ ಹಳೆಯ ಪಾತ್ರೆ, ಟೈರುಗಳಲ್ಲಿ ನೀರು ನಿಲ್ಲದಂತೆ ಹಾಗೂ ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಅರಿವು ಮೂಡಿಸಬೇಕುಈ ಕುರಿತು ಸೂಕ್ತ ನಿರ್ದೇಶನ ನೀಡಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಳಿ ಲಾರ್ವಹಾರಿ ಮೀನು ಸಾಕಾಣಿಕಾ ತೊಟ್ಟಿಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲು ಅವಕಾಶವಿದ್ದಲ್ಲಿ ಸಿಇಓ ಅವರೊಂದಿಗೆ ಚರ್ಚಿಸಿ ತಿಳಿಸಲಾಗುವುದೆಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಟಿ.ಎ ವೀರಭದ್ರಯ್ಯ, ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ.ಮೋಹನ್ ದಾಸ್, ಆರ್.ಸಿ.ಎಚ್ ಅಧಿಕಾರಿ ಡಾ. ಕೇಶವರಾಜ್, ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಖಾ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎನ್ ಆಂಜನಪ್ಪ, ಡಾ.ಸನತ್ ಕುಮಾರ್ ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.