ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ನೊಣವಿನಕೆರೆಯ ಕಾಡಸಿದ್ದೇಶ್ವರ ಮಠಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಇಂದು ಪೂಜೆ ಸಲ್ಲಿಸಿದರು.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ದೆಹಲಿಯ ತಿಹಾರ್ ಜೈಲು ಸೇರಿದ್ದ ಶಿವಕುಮಾರ್ ಶನಿವಾರ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದರು. ಮೆರವಣಿಗೆಯ ಮೂಲಕ ಅವರನ್ನು ಕೆಪಿಸಿಸಿ ಕಚೇರಿಗೆ ಕರೆತರಲಾಗಿತ್ತು.
ಸಂಕಷ್ಟ ಎದುರಾದಾಗ ಮತ್ತು ಸಂಕಷ್ಟು ನಿವಾರಣೆಯಾದಾಗ ಶಿವಕುಮಾರ್ ನೊಣವಿನಕೆರೆಯ ಕಾಡುಸಿದ್ದೇಶ್ವರ ಮಠಕ್ಕೆ ಭೇಟಿ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ.
ಹಿಂದೆ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವ ಮೊದಲು ಕಾಡಸಿದ್ದೇಶ್ವರ ಮಠಕ್ಕೆ ಬಂದು ಹೋಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ನಿನ್ನೆ ತಡವಾಗಿದ್ದರಿಂದ ಇಂದು ಭೇಟಿ ನೀಡಿದ್ದೇನೆ. ಅಜ್ಜಯ್ಯನ ಆಶೀರ್ವಾದ ಪಡೆದಿದ್ದೇನೆ. ನಾನು ನ್ಯಾಯದ ಪರವಾಗಿ ನಡೆದುಕೊಳ್ಳುತ್ತಿದ್ದೇನೆ ಎಂದರು.