Publicstory/publicstory
ತುಮಕೂರು: ಚುನಾವಣೆಯನ್ನು ಮತ್ತಷ್ಟು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಜೋಡಣೆ ಮಾಡುವ ಕಾರ್ಯಕ್ರಮವನ್ನು ಚುನಾವಣಾ ಆಯೋಗ ಜಾರಿಗೊಳಿಸಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು.
ತುಮಕೂರು ವಿಶ್ವವಿದ್ಯಾನಿಲಯದ ಕಲಾ ಕಾಲೇಜಿನ ಆವರಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಪಿಕ್ ಕಾರ್ಡ್ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಚುನಾವಣೆ ಪಾರದರ್ಶಕವಾಗಿ ನಡೆಯಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಗ ಜಾರಿಗೆ ತಂದಿದೆ.
ಇದರಿಂದ ಚುನಾವಣೆ ಮತ್ತಷ್ಟು ಪಾರದರ್ಶಕವಾಗುತ್ತದೆ. ಚುನಾವಣೆಯನ್ನು ಇನ್ನಷ್ಟು ಪಾರದರ್ಶಕವಾಗಿ ನಡೆಯುವ ಸಲುವಾಗಿ ಮತದಾರರ ಗುರುತಿನ ಚೀಟಿಗೆ ಆಧಾರ್ ನಂಬರ್ ಜೋಡಣೆ ಮಾಡಬೇಕು ಎಂದರು.
ತುಮಕೂರು ವಿವಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಬಿ. ಕರಿಯಣ್ಣ ಮಾತನಾಡಿ, ಮತದಾನ ಬಹಳ ಪವಿತ್ರವಾದ ಹಕ್ಕು, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳಬೇಕಾದರೆ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಹೀಗಾಗಬೇಕಾದರೆ ಚುನಾವಣೆ ಪಾರದರ್ಶಕವಾಗಿ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮತದಾರರ ಗುರುಚಿನ ಚೀಟಿಗೆ ಆಧಾರ್ ನಂಬರ್ ಜೋಡಣೆ ಮಾಡಬೇಕು ಎಂದರು.
ಈ ವೇಳೆ ಜಿ.ಪಂ. ಯೋಜನಾ ಅಭಿಯಂತರ ಶ್ರೀನಿವಾಸ್, ತುಮಕೂರು ವಿವಿ ಕಲಾ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.