ಭೀಕರ ರಸ್ತೆ ಅಪಘಾತ 9 ಜನರ ಸಾವು; 14 ಜನರಿಗೆ ತೀವ್ರ ಗಾಯ
ಮೃತರಿಗೆ 2 ಲಕ್ಷ ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ | ವಿವಿಧ ಗಣ್ಯರಿಂದ ಸಂತಾಪ
ಶಿರಾ: ಕೂಲಿ ಕೆಲಸಕ್ಕೆಂದು ರಾಯಚೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕ್ರೂಷರ್ ವಾಹನಕ್ಕೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕ್ರೂಜರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ 9 ಜನ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ ಬೆಳಗಿನ ಜಾವ ನಡೆದಿದೆ.
14 ಜನ ಗಾಯಾಳುಗಳಾಗಿದ್ದು, ಮೃತಪಟ್ಟವರು ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಸುಜಾತಾ (25), ಲಕ್ಷ್ಮೀ 13), ವಿನೋದ್ (3), ಕ್ರೂಜರ್ ಚಾಲಕ ಕೃಷ್ಣಪ್ಪ (೨೫), ಸಿದ್ದಯ್ಯಸ್ವಾಮಿ, ಪ್ರಭು, ಬಸಮ್ಮ, ಎಂದು ತಿಳಿದುಬಂದಿದ್ದು, ಉಳಿದವರ ಹೆಸರನ್ನು ಪೊಲೀಸರು ಬಹಿರಂಗ ಪಡಿಸಿಲ್ಲ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ವಾಹನವನ್ನು ತೆರವುಗೊಳಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ಮಾಡಿದ್ದಾರೆ.
ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಹಾಗೂ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರಧಾನಿ ಸೇರಿಸಂತೆ ವಿವಿಧ ಗಣ್ಯರಿಂದ ಸಂತಾಪ
ಈ ದುರ್ಘಟನೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ ರೂ. 50 ಸಾವಿರ ಪರಿಹಾರಧನ ಘೋಷಣೆ ಮಾಡಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಭೇಟಿ: ಘಟನೆ ನಡೆದ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್, ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್, ಶಿರಾ ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭೀಕರ ರಸ್ತೆ ಅಪಘಾತದ ದುರ್ಘಟನೆ ದುರದೃಷ್ಟಕರ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಮೃತದೇಹಗಳನ್ನು ನಗರದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಹಾಗೂ ಗಾಯಾಳುಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಲಾಗುವುದು ಎಂದರು.

ಶಿರಾ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ಕುಟುಂಬದವರಿಗೆ ಸಾಂತ್ವನ ಹೇಳಿದ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ, ವೈದ್ಯಾಧಿಕಾರಿಗಳಾದ ಡಾ.ಶ್ರೀನಾಥ್, ಡಾ.ಡಿ.ಎಂ.ಗೌಡ ಸೇರಿದಂತೆ ಹಲವರು ಹಾಜರಿದ್ದರು.