Publicstory/prajayoga
ತುಮಕೂರು: ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ “ಅಜಾದಿ ಕಾ ಅಮೃತ ಮಹೋತ್ಸವ”ದ ಪ್ರಯುಕ್ತ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ವೈಭವಯುತವಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಯಾವುದೇ ಲೋಪವಾಗದಂತೆ ಧ್ವಜಸ್ತಂಭ, ಉತ್ತಮ ಬ್ಯಾಕ್‌ಡ್ರಾಪ್, ವೇದಿಕೆ ಸಜ್ಜುಗೊಳಿಸುವ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸ್ವಾತಂತ್ರ್ಯ ಹೋರಾಟಗಾರರು, ಮಾಜಿ ಸೈನಿಕರು, ಸಚಿವರು, ಶಾಸಕರು ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಗಣ್ಯರಿಗೆ, ಸಂಘ ಸಂಸ್ಥೆಗಳಿಗೆ ಆಹ್ವಾನ ಪತ್ರಿಕೆಯನ್ನು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ದಿನಾಚರಣೆಯಂದು ಪಥ ಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡುವ ಶಾಲಾ ಮಕ್ಕಳು, ಮೀಸಲು ಪಡೆ, ಎನ್‌ಸಿಸಿ ತಂಡ, ಪೊಲೀಸ್ ತುಕಡಿಗಳಿಗೆ ಬಹುಮಾನ ನೀಡುವ ಬಗ್ಗೆ ಚರ್ಚಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು 5 ತಂಡಗಳನ್ನು ಸಜ್ಜುಗೊಳಿಸಿ ಉತ್ತಮ ಪ್ರದರ್ಶನ ನೀಡುವಂತೆ ತಾಲೀಮು ನಡೆಸಬೇಕು. ನಗರದ ಪ್ರಮುಖ ವೃತ್ತ, ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಭಾನುವಾರ ಆಗಸ್ಟ್ 14ರ ಸಂಜೆ 4 ಗಂಟೆಗೆ ನಗರದ ಅಮಾನಿಕೆರೆಯಿಂದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದವರೆಗೆ ನಡೆಯಲಿರುವ ಸೈಕ್ಲೋಥಾನ್ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚಿಸಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಈಗಾಗಲೇ ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾಯ್ತಿಯಿಂದ ನೀಡಿರುವ ರಾಷ್ಟ್ರಧ್ವಜವನ್ನು ಪ್ರತಿ ಮನೆಗಳ ಮೇಲೆ ಹಾರಿಸಬೇಕೆಂದು ಎಲ್ಲಾ ನಾಗರಿಕರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಅಜಯ್, ಡಿವೈಎಸ್‌ಪಿ ಡಿಎಆರ್ ಪರಮೇಶ್, ಪಾಲಿಕೆ ಆಯುಕ್ತೆ ರೇಣುಕಾ, ತಹಶಿಲ್ದಾರ್ ಮೋಹನ್‌ಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ, ರೇಷ್ಮೆ ಇಲಾಖೆ ಉಪನಿರ್ದೇಶಕ ಬಾಲಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಹೇಮಲತಾ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ.ಬಿ. ಪರಮೇಶ್ವರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.